*ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*
ನವದೆಹಲಿ, ನವೆಂಬರ್ ೧೧: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.
ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.
*ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ*
ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.
ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ, ಮೊದಲಾದವರು ಉಪಸ್ಥಿತರಿದ್ದರು.